ಬೆಂಗಳೂರು: ಕ್ಷೀರಭಾಗ್ಯ ಯೋಜನೆ ರೂಪಿಸುವ ಮೂಲಕ ಸರ್ಕಾರಿ ಶಾಲೆ ಮಕ್ಕಳಿಗೆ ಹಾಲು ಕೊಡುತ್ತಿರುವ ರಾಜ್ಯ ಸರ್ಕಾರ ಮತ್ತೊಂದು ತೀರ್ಮಾನ ಕೈಗೊಂಡಿದೆ. ವಾರದಲ್ಲಿ 3 ದಿನ ಹಾಲು ವಿತರಿಸಲಾಗುತ್ತಿದ್ದು, ಅದನ್ನು 5 ದಿನಕ್ಕೆ ವಿಸ್ತರಿಸಲು ನಿರ್ಧರಿಸಿದೆ.
ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸರ್ಕಾರಿ ಶಾಲೆಯ ಮಕ್ಕಳಿಗೆ ವಾರದಲ್ಲಿ 5 ದಿನ ಹಾಲು ವಿತರಿಸಲಿದ್ದು, ಈ ಕುರಿತಂತೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಹಾಲಿಗೆ 4 ರೂಪಾಯಿ ಪ್ರೋತ್ಸಾಹಧನ ನೀಡುತ್ತಿರುವುದರಿಂದ ಡೇರಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು ಬರುತ್ತಿದ್ದು, ಇಷ್ಟೇ ಪ್ರಮಾಣದಲ್ಲಿ ಮಾರುಕಟ್ಟೆ ಆಗದೆ ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ. ಹಾಗಾಗಿ ವಾರದ 5 ದಿನಗಳಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಹಾಲು ವಿತರಣೆ ಮಾಡಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
1.02 ಕೋಟಿ ಮಕ್ಕಳಿಗೆ ವಾರದಲ್ಲಿ 3 ದಿನ ಹಾಲು ವಿತರಿಸಲಾಗುತ್ತಿದ್ದು, ಇದಕ್ಕಾಗಿ 550 ಕೋಟಿ ರೂ.ಗಳನ್ನು ಸರ್ಕಾರ ಖರ್ಚು ಮಾಡುತ್ತಿದೆ. ಇನ್ನುಮುಂದೆ ವಾರದ 5 ದಿನಗಳ ಕಾಲ ಸರ್ಕಾರಿ ಶಾಲೆಯ ಮಕ್ಕಳಿಗೆ ಹಾಲು ವಿತರಿಸಲಿದ್ದು, ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.