ಬೆಂಗಳೂರು: ಹೊಸಕೋಟೆಯಲ್ಲಿ ಅಂಗಡಿಯಲ್ಲಿ ಕಳವು ಮಾಡಿದ ಆರೋಪದ ಮೇಲೆ ಮೂವರು ಶಾಲಾ ವಿದ್ಯಾರ್ಥಿಗಳನ್ನು ಬೆತ್ತಲೆ ಮಾಡಿ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಮಕ್ಕಳನ್ನು ಶಾಲೆಯಿಂದ ಕರೆದೊಯ್ದು, ಬೆತ್ತಲೆ ಮಾಡಿ, ಅವರ ಮೇಲೆ ಅಮಾನವೀಯವಾಗಿ ಅಂಗಡಿ ಮಾಲೀಕನ ಮಗ ಮತ್ತು ಆತನ ಸಹಚರರು ಹಲ್ಲೆ ಮಾಡಿರುವುದು ಗಮನಕ್ಕೆ ಬಂದರೂ, ತುರ್ತು ಕ್ರಮ ಕೈಗೊಳ್ಳದೇ ವಿಳಂಬ ನೀತಿ ಅನುಸರಿಸಿದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪ್ರಕರಣ ಗಮನಕ್ಕೆ ಬಂದ ಹಿನ್ನಲೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿ ಅಧಕ್ಷ ವಿ.ಎಸ್.ಉಗ್ರಪ್ಪ ಹಾಗೂ ಸಮಿತಿಯ ಸದಸ್ಯರು ಹೊಸಕೋಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡ ಅವರು, ಶಾಲೆಯ ಶಿಕ್ಷಕರು ಮೊದಲೇ ಎಚ್ಚರಿಕೆ ವಹಿಸಿದ್ದರೆ ತಡೆಯಬಹುದಿತ್ತು. ಅಲ್ಲದೇ, ಗಮನಕ್ಕೆ ಬಂದ ಕೂಡಲೇ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು ಎಂದು ಹೇಳಿದ್ದಾರೆ. ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.