ಬೆಂಗಳೂರು: ಮಹಾದಾಯಿ ನ್ಯಾಯಾಧೀಕರಣದ ತೀರ್ಪನ್ನು ವಿರೋಧಿಸಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಕೆಲವು ಜಿಲ್ಲೆಗಳಲ್ಲಿ ಬಂದ್ ಆಚರಿಸಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಕಡೆಗಳಲ್ಲಿ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಇದೀಗ ಮಹಾದಾಯಿ ನ್ಯಾಯಾಧೀಕರಣದ ತೀರ್ಪಿನ ಹಿನ್ನಲೆಯಲ್ಲಿ ಉತ್ತರ ಕರ್ನಾಟಕದ ಧಾರವಾಡ, ಗದಗ, ಬೆಳಗಾವಿ ಮೊದಲಾದ ಕಡೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ, ಕಿತ್ತೂರು, ಖಾನಾಪುರ, ಬೈಲಹೊಂಗಲ ಮೊದಲಾದೆಡೆ ರಜೆ ಘೋಷಿಸಲಾಗಿದೆ.
ಮಹಾದಾಯಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಮತ್ತು ವಿವಿಧ ಕಡೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಲಾಗಿದೆ.