ಹೊನ್ನಾಳಿ: ರಾಜ್ಯ ಸರ್ಕಾರದ ಲೋಪಗಳ ವಿರುದ್ಧ ಜನಜಾಗೃತಿ ಮೂಡಿಸಲಾಗುವುದೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲಾಗುತ್ತಿದ್ದು, ಕಾಂಗ್ರೆಸ್ ಸರ್ಕಾರದ ತಪ್ಪುಗಳ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಫಲ್ಯ ಮತ್ತು ಸಚಿವರು, ಶಾಸಕರು ನಡೆಸಿರುವ ಭ್ರಷ್ಟಾಚಾರ ಕುರಿತು ಮಾಹಿತಿ ಕಲೆಹಾಕುತ್ತಿದ್ದು, ಶೀಘ್ರವೇ ಆರೋಪಪಟ್ಟಿ ಬಿಡುಗಡೆ ಮಾಡಲಾಗುವುದು. ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡಿದ್ದರೂ, ಅದನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ. ಮುಂದಿನ 15 ದಿನಗಳಲ್ಲಿ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ಸಭೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಸಿದ್ಧರಾಮಯ್ಯ ಅವರಿಗೆ ಇನ್ನೂ ಎರಡು ವರ್ಷ ಅಧಿಕಾರ ಇದೆ. ನಾವು ಈ ಅವಧಿಯಲ್ಲಿ ಪಕ್ಷವನ್ನು ಇನ್ನಷ್ಟು ಪ್ರಬಲವಾಗಿ ಸಂಘಟಿಸಿ, ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.