ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಾರ್ಮಿಕ ಸಂಘಟನೆಗಳು ಸೆಪ್ಟಂಬರ್ 2 ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.
ವಿವಿಧ ಕಾರ್ಮಿಕ ಸಂಘಟನೆಗಳು, ಆಟೋ ಚಾಲಕರು, ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ. ನೌಕರ ಸಂಘಟನೆ ಸೇರಿದಂತೆ ಹಲವಾರು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿವೆ. ರಾಜ್ಯದಲ್ಲಿಯೂ ಮುಷ್ಕರ ಯಶಸ್ವಿಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ನಗರ, ಚಿಕ್ಕಮಗಳೂರು ಮತ್ತು ಕೋಲಾರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗದಗ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ರಜೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.
ಹಾವೇರಿ, ಧಾರವಾಡ, ಉಡುಪಿ, ವಿಜಯಪುರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ರಾಯಚೂರು, ಚಾಮರಾಜನಗರ ಮೊದಲಾದ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಹೇಳಲಾಗಿದೆ.