ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಪರ ಕನ್ನಡ ಪರ ಸಂಘಟನೆಗಳು ಇಂದು ನಡೆಸುತ್ತಿರುವ ಕರ್ನಾಟಕ ಬಂದ್ ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ನಾಗರಿಕರಿಗೆ ಬಂದ್ ಬಿಸಿ ತಟ್ಟಿದ್ದು, ಇಂದು ಬೆಳಗಿನ ಜಾವ ವಿವಿಧ ಕಡೆಗಳಿಂದ ಆಗಮಿಸಿದ್ದ ಪ್ರಯಾಣಿಕರು ಬಿಎಂಟಿಸಿ ಬಸ್, ಆಟೋ, ಟ್ಯಾಕ್ಸಿ ಸಂಚಾರವಿಲ್ಲದ ಕಾರಣ ಪರದಾಡುವಂತಾಗಿದೆ. ‘ನಮ್ಮ ಮೆಟ್ರೋ’ ಸಂಚಾರವನ್ನೂ ಸಹ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಸಂಚಾರ ಆರಂಭಿಸುವ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.
ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಹಾಗೂ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಅವರುಗಳನ್ನು ವಶಕ್ಕೆ ಪಡೆದಿದ್ದಾರೆ. ಟ್ಯಾಕ್ಸಿ ಸಂಚಾರ ಇಲ್ಲದ ಕಾರಣ ವಿಮಾನದಲ್ಲಿ ಇಂದು ಸಂಜೆ 5 ಗಂಟೆಗೆ ತೆರಳಬೇಕಿದ್ದವರು ಬಂದ್ ಆರಂಭಕ್ಕೂ ಮುನ್ನವೇ ಬೆಳಿಗ್ಗೆಯೇ ವಿಮಾನ ನಿಲ್ದಾಣ ತಲುಪಿ ಅಲ್ಲಿಯೇ ಕಾಲ ಕಳೆಯುತ್ತಿದ್ದಾರೆ.
ಮಂಡ್ಯದಲ್ಲಿ ಪ್ರತಿಭಟನಾಕಾರರೋರ್ವರು ಕೈಕೊಯ್ದುಕೊಳ್ಳಲು ಯತ್ನಿಸಿದ ಘಟನೆಯೂ ನಡೆದಿದೆ. ರಾಜ್ಯದಲ್ಲಿ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಕಡೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆಯಲ್ಲದೇ ಸರ್ಕಾರಿ ಕಛೇರಿ ಹಾಗೂ ಬ್ಯಾಂಕ್ ಗಳೂ ಸಹ ಕಾರ್ಯ ನಿರ್ವಹಿಸುತ್ತಿಲ್ಲ. ಬಳ್ಳಾರಿಯಲ್ಲಿ ತಮಿಳುನಾಡು ನೋಂದಣಿ ಹೊಂದಿದ್ದ ಲಾರಿಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯೂ ನಡೆದಿದೆ. ಬಂದ್ ಹಿನ್ನಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.