ಮುಂಬೈ: ಮುಂಬೈನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ವಿಶೇಷ ಮಹಾಸಭೆ ಭಾನುವಾರ ಬೆಳಿಗ್ಗೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಸಿಸಿಐ ಅಧ್ಯಕ್ಷರಾಗಿದ್ದ ಶಶಾಂಕ್ ಮನೋಹರ್ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಸ್ವತಂತ್ರ ಚೇರ್ಮನ್ ಆಗಿ ಆಯ್ಕೆಯಾಗಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅನುರಾಗ್ ಠಾಕೂರ್ ಅವರೊಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿಯಾಗಿದ್ದ ಅನುರಾಗ್, ಮೊದಲೇ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅವರಿಂದ ತೆರವಾದ ಕಾರ್ಯದರ್ಶಿ ಸ್ಥಾನಕ್ಕೆ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿರುವ ಅಜಯ್ ಶಿರ್ಕೆ ಅವರನ್ನು ನೇಮಿಸಲಾಗಿದೆ. ಅನುರಾಗ್ ಠಾಕೂರ್ ಅಧ್ಯಕ್ಷರಾಗಿ, ಅಜಯ್ ಶಿರ್ಕೆ ಕಾರ್ಯದರ್ಶಿಯಾಗಿ ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ. ಅನುರಾಗ್ ಠಾಕೂರ್ ಬಿಸಿಸಿಐ ಅಧ್ಯಕ್ಷರಾದ ಕಿರಿಯ ವಯಸ್ಸಿನ ವ್ಯಕ್ತಿ ಎನಿಸಿಕೊಂಡಿದ್ದಾರೆ.