ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ, ಸೆಪ್ಟಂಬರ್ 16 ರಂದು ತಮಿಳುನಾಡು ಬಂದ್ ಗೆ ಕರೆ ನೀಡಲಾಗಿದ್ದು, ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಪತ್ರ ಬರೆದಿರುವ ಸಿ.ಎಂ., ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಉಂಟಾದ ಹಿಂಸಾಚಾರವನ್ನು ಕೆಲವೇ ಗಂಟೆಗಳಲ್ಲೇ ತಡೆಯಲಾಗಿದೆ. ಮುಂದೆ ಹಿಂಸಾಚಾರ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ತಮಿಳುನಾಡಿನಲ್ಲಿ ಕನ್ನಡಿಗರ ಮತ್ತು ಅವರ ಆಸ್ತಿ, ಪಾಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.
ಜನರ ನಡುವೆ ವೈರತ್ವ ಬೆಳೆದರೆ, ಎರಡೂ ರಾಜ್ಯಗಳಿಗೆ ಹಾನಿಯಾಗುತ್ತದೆ. ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ನಮ್ಮ ರಾಜ್ಯದ ಅಧಿಕಾರಿಗಳಿಗೆ ಸಂಪರ್ಕದಲ್ಲಿರಲು ಸೂಚನೆ ನೀಡಿದ್ದು, ಅದೇ ರೀತಿ ನಿಮ್ಮ ಅಧಿಕಾರಿಗಳಿಗೂ ಕರ್ನಾಟಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿದ್ದಾರೆ.