ಲಖ್ನೋ: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ, ಯುವಕರು ಚುಡಾಯಿಸಿದ ಪ್ರಕರಣ ಹಿಂಸಾಚಾರಕ್ಕೆ ತಿರುಗಿ, ಮೂವರನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಬಿಜ್ನೋರ್ ಜಿಲ್ಲೆಯ ಪೆದಾ ಎಂಬ ಗ್ರಾಮದಲ್ಲಿ ಶಾಲೆಗೆ ಹೋಗುವ ವಿದ್ಯಾರ್ಥಿನಿಗೆ, ಬೇರೆ ಸಮುದಾಯಕ್ಕೆ ಸೇರಿದ ಯುವಕರು ಚುಡಾಯಿಸಿದ್ದಾರೆ. ಇದು ಮತ್ತೊಂದು ಸಮುದಾಯದವರನ್ನು ಕೆರಳಿಸಿದ್ದು, ಎರಡೂ ಕಡೆಯವರು ಹಿಂಸಾಚಾರಕ್ಕೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಒಂದೇ ಕುಟುಂಬಕ್ಕೆ ಸೇರಿದ ಮೂವರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.