ಮಂಗಳೂರು: ಮೆಡಿಕಲ್ ಸೀಟು ಕೊಡಿಸುವುದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ 45 ವರ್ಷದ ಸಂಜೀವ್ ಕುಮಾರ್ ಹಾಗೂ ಮಡಿಕೇರಿ ಜಿಲ್ಲೆಯ 34 ವರ್ಷದ ತಿಮ್ಮಯ್ಯ ಬಂಧಿತ ಆರೋಪಿಗಳು. ಬಂಧಿತರಿಂದ 37.50 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ. ಇವರಿಬ್ಬರು 16 ವಿದ್ಯಾರ್ಥಿಗಳಿಗೆ ಮಂಗಳೂರಿನ ಪ್ರತಿಷ್ಠಿತ ಕಾಲೇಜ್ ಗಳಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ 2.78 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.
ವಂಚನೆಗೆ ಒಳಗಾದ ವಿದ್ಯಾರ್ಥಿಗಳು, ಉಳ್ಳಾಲ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿದೆ.