ಬೀದರ್: ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.
ಬೀದರ್, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಅನೇಕ ಗ್ರಾಮಗಳಲ್ಲಿ ನೀರು ಆವರಿಸಿದ್ದು, ಕೆಲವು ಕಡೆಗಳಲ್ಲಿ ಸೇತುವೆ ಮುಳುಗಡೆಯಾಗಿ ಸಂಚಾರ ಬಂದ್ ಆಗಿದೆ. ಬೀದರ್, ಕಲಬುರಗಿ ಜಿಲ್ಲೆಗಳ ಅನೇಕ ತಾಲ್ಲೂಕುಗಳಲ್ಲಿ ನೆರೆ ಹಾವಳಿಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಕಾಗಿಣಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ದಂಡೋತಿ ಸೇತುವೆ ಜಲಾವೃತಗೊಂಡಿದೆ.
ಕಲಬುರಗಿ ಸೇಡಂ ಸಂಪರ್ಕ ಕಡಿತಗೊಂಡಿದೆ. ಚಿತ್ತಾಪುರ ತಾಲ್ಲೂಕಿನಲ್ಲಿ ನೀರಿನಲ್ಲಿ ಸಿಲುಕಿದ್ದ 5 ಮಂದಿಯನ್ನು ರಕ್ಷಿಸಲಾಗಿದೆ. ಕೆರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮನೆಗಳು ಕುಸಿದಿವೆ. ಜಿಲ್ಲಾಡಳಿತಗಳಿಂದ ಪರಿಸ್ಥಿತಿ ನಿಭಾಯಿಸಲು ಕ್ರಮ ಕೈಗೊಳ್ಳಲಾಗಿದೆ.