ಬೆಂಗಳೂರು: ಕುಡಿಯುವ ನೀರಿಗಾಗಿ ಮಾತ್ರ ಕಾವೇರಿ ನದಿ ನೀರನ್ನು ಬಳಸಿಕೊಳ್ಳಲು ವಿಧಾನ ಮಂಡಲ ಉಭಯ ಸದನಗಳಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.
ಈ ನಿರ್ಣಯದ ಬಗ್ಗೆ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡುವ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್, ಇಂದು ರಾಜ್ಯದ ಪರ ವಕೀಲ ಫಾಲಿ ಎಸ್. ನಾರಿಮನ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ನವದೆಹಲಿಗೆ ತೆರಳಲಿರುವ ಅರವಿಂದ್ ಜಾಧವ್, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಡಲಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಸಂಕಷ್ಟದ ಸಮಯದಲ್ಲೂ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಲಾಗಿದೆ. ಇನ್ನು ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಲಿದ್ದಾರೆ. ಈ ನಡುವೆ, ಕರ್ನಾಟಕ ಆದೇಶ ಪಾಲಿಸುತ್ತಿಲ್ಲ ಎಂದು ಮತ್ತೆ ಸುಪ್ರೀಂ ಕೋರ್ಟ್ ಗಮನ ಸೆಳೆಯಲು ತಮಿಳುನಾಡು ಮುಂದಾಗಿದೆ.