ಬೆಂಗಳೂರು: ಸೆಪ್ಟಂಬರ್ 20 ರಂದು ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಲು ನೀಡಿರುವ, ಆದೇಶ ಮಾರ್ಪಾಟಿಗೆ ಕೋರಿ, ಇಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಿದೆ.
ಕುಡಿಯುವ ನೀರಿಗಾಗಿ ಮಾತ್ರ ಕಾವೇರಿ ನದಿ ನೀರು ಬಳಸಲು ಕರ್ನಾಟಕ ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಂಡಿರುವುದನ್ನು ಸುಪ್ರೀಂ ಕೋರ್ಟ್ ಗೆ ತಿಳಿಸಲಾಗುವುದು. ರಾಜ್ಯದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರು, ಈ ಕುರಿತಂತೆ ರಾಜ್ಯದ ಪರ ವಕೀಲ ಫಾಲಿ ಎಸ್. ನಾರಿಮನ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ನೀರು ಬಿಡುಗಡೆಗೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಇದಕ್ಕೂ ಮೊದಲೇ ರಾಜ್ಯ ಸರ್ಕಾರ ಆದೇಶ ಮಾರ್ಪಾಟಿಗೆ ಮನವಿ ಮಾಡಲಿದೆ.