ಬೆಂಗಳೂರು: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸಮವಸ್ತ್ರವಾಗಿ ಸ್ಕರ್ಟ್ ಬದಲು, ಚೂಡಿದಾರ್ ವಿತರಿಸಲು ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತನ್ವೀರ್ ಸೇಠ್ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಚೂಡಿದಾರ್ ವಿತರಿಸುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.
ಪಠ್ಯ ಪುಸ್ತಕ, ಸೈಕಲ್, ಸಮವಸ್ತ್ರ ಮತ್ತು ಶೂ ವಿತರಣೆ ಬಗ್ಗೆ ಗೊಂದಲಗಳನ್ನು ಸರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷಾರಂಭದಲ್ಲೇ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸುಮಾರು 14,000 ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ಇದ್ದು, ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸೂಚಿಸಿದ್ದಾಗಿ ಸಚಿವರು ತಿಳಿಸಿದ್ದಾರೆ.