ಬೆಂಗಳೂರು: ಮಹದಾಯಿ ನದಿ ನೀರಿನ ವಿಚಾರವಾಗಿ, ಮುಂಬೈನಲ್ಲಿ ಮುಖ್ಯಮಂತ್ರಿಗಳ ಸಭೆ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಇಂದು ಸಂಜೆ ಸರ್ವಪಕ್ಷ ಸಭೆ ಕರೆಯಲಾಗಿದೆ.
ಮಹಾರಾಷ್ಟ್ರ, ಕರ್ನಾಟಕ ಹಾಗೂ ಗೋವಾ ಮುಖ್ಯಮಂತ್ರಿಗಳು ಸಭೆ ಸೇರಿ ಮಹದಾಯಿ ವಿಚಾರವಾಗಿ ಸಮಾಲೋಚನೆ ನಡೆಸಲಿದ್ದು, ಈ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಯಲಿದೆ. ಸಭೆಯಲ್ಲಿ ಮಹದಾಯಿಯಲ್ಲಿ ಹರಿದು ಹೋಗುವ ನೀರಿನ ಪ್ರಮಾಣ, ರಾಜ್ಯಕ್ಕೆ ಕುಡಿಯುವ ನೀರಿಗಾಗಿ ಬಳಸಿಕೊಳ್ಳುವ ನೀರಿನ ಪ್ರಮಾಣ ಮೊದಲಾದ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿ, ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು.
ಮುಂಬೈನಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ಸಭೆಗೆ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬುದರ ಕುರಿತಾಗಿ ಚರ್ಚಿಸಲಾಗುವುದು. ಸಭೆಯಲ್ಲಿ ಸರ್ವಪಕ್ಷಗಳ ನಾಯಕರು ಪಾಲ್ಗೊಂಡು ಅಭಿಪ್ರಾಯ ತಿಳಿಸಲಿದ್ದು, ಎಲ್ಲರ ಸಲಹೆ ಪಡೆದುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂಬೈನಲ್ಲಿ ನಡೆಯಲಿರುವ 3 ರಾಜ್ಯಗಳ ಮುಖ್ಯಮಂತ್ರಿಗಳ ಸಭೆಗೆ ತೆರಳಲಿದ್ದಾರೆ ಎನ್ನಲಾಗಿದೆ.