ಹುಬ್ಬಳ್ಳಿ: ಹಜರತ್ ಟಿಪ್ಪುಸುಲ್ತಾನ್ ಜಯಂತಿ ಆಚರಣೆಗೆ ಬಿ.ಜೆ.ಪಿ. ಪ್ರಬಲ ವಿರೋಧ ವ್ಯಕ್ತಪಡಿಸಿದೆ. ವಿರೋಧದ ನಡುವೆಯೂ ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಜನರ ಆಶೋತ್ತರಗಳಿಗೆ ವಿರುದ್ಧವಾಗಿ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಪ್ರಸ್ತುತ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ಘಟನೆಗಳು ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಆಚರಿಸಬಾರದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಿಕ್ ಬ್ಯಾಕ್ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕಿರುವುದು ಸಂತಸ ತಂದಿದೆ. ರಾಜ್ಯದಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿ, ಅಧಿಕಾರಕ್ಕೆ ತರಲು ಇದರಿಂದ ಅನುಕೂಲವಾಗಿದೆ ಎಂದು ಹೇಳಿದ್ದಾರೆ.
ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ್ ಅವರು ಹೋರಾಟ ಮುಂದುವರೆಸುವುದಾದರೆ, ಸ್ವಾಗತಾರ್ಹ. ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಪಕ್ಷದ ವತಿಯಿಂದ ಹಿಂದುಳಿದ ವರ್ಗಗಳ ಸಮಾವೇಶ ಆಯೋಜಿಸಿದ್ದು, ಸಿದ್ಧತೆಗಳು ನಡೆದಿವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.