ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಪೊಲೀಸರು ಜೂನ್ 4 ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಪೊಲೀಸರು ಪ್ರತಿಭಟನೆ ನಡೆಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ಸಮಸ್ಯೆ ಎದುರಿಸುತ್ತಿದ್ದರೆ, ಅದನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಇದೆ. ಅದನ್ನು ಬಿಟ್ಟು, ಪ್ರತಿಭಟನೆಗೆ ಇಳಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಎಸ್ಮಾ ಜಾರಿಗೊಳಿಸುವುದಾಗಿಯೂ ಎಚ್ಚರಿಕೆ ನೀಡಲಾಗಿದ್ದು, ಸರ್ಕಾರದ ಆದೇಶ ಉಲ್ಲಂಘಿಸಿ ಪ್ರತಿಭಟನೆ ಮಾಡಿದರೆ, ಕೆಲಸದಿಂದ ವಜಾ ಮಾಡುವುದಾಗಿ ಹೇಳಿದ್ದಾರೆ.
ಮಾನ್ಯತೆ ಇಲ್ಲದ ಪೊಲೀಸ್ ಸಂಘದ ಅಧ್ಯಕ್ಷರು ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ನಿಯಮಾನುಸಾರ ಪೊಲೀಸರು ಪ್ರತಿಭಟನೆ ನಡೆಸುವಂತಿಲ್ಲ. ಆವರ ಸಮಸ್ಯೆಗೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ. ಪೊಲೀಸರು ಕೂಡ ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕೆಂದು ಸಿಎಂ ಹೇಳಿದ್ದಾರೆ.