ನವದೆಹಲಿ: ದೇಶದಲ್ಲಿ ವಾಹನಗಳ ಸಂಖ್ಯೆ ಹೆಚ್ಚಿದಂತೆಲ್ಲಾ, ಅಪಘಾತಗಳ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಅಪಘಾತಗಳಿಂದ ಸಾಯುವವರ ಸಂಖ್ಯೆ ಕೂಡ ಜಾಸ್ತಿಯಾಗಿದೆ. ಪ್ರತಿ ಗಂಟೆಗೆ 15 ಮಂದಿ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ.
2015ರಲ್ಲಿ ದೇಶದಲ್ಲಿ ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯ ಜನ ಸಾವು ಕಂಡಿದ್ದು, ಸುಮಾರು 5 ಲಕ್ಷದಷ್ಟು ಅಪಘಾತ ಸಂಭವಿಸಿವೆ. ಹೀಗೆ ಸಂಭವಿಸಿದ ಅಪಘಾತಗಳಲ್ಲಿ 145000 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರದ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಲಾಗಿದೆ. 2015ರಲ್ಲಿ ಸಂಭವಿಸಿದ ಶೇ.54 ರಷ್ಟು ಅಪಘಾತದಲ್ಲಿ 15-34 ವರ್ಷ ವಯೋಮಿತಿಯವರು ಸಾವನ್ನಪ್ಪಿದ್ದಾರೆ.
ಚಾಲಕರ ನಿರ್ಲಕ್ಷ್ಯದಿಂದಾಗಿ ಶೇ.77.1ರಷ್ಟು ಅಪಘಾತಗಳು ಸಂಭವಿಸುತ್ತವೆ ಎಂದು ಹೇಳಲಾಗಿದೆ. ಅತಿ ಹೆಚ್ಚು ಅಪಘಾತ ಸಂಭವಿಸುವ ರಾಜ್ಯಗಳಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 4ನೇ ಸ್ಥಾನದಲ್ಲಿದೆ. ಪ್ರತಿದಿನ 400 ಮಂದಿ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ ಎನ್ನಲಾಗಿದೆ.