ಹಾಸನ: ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ, ನಾಲ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಸಮೀಪ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೊರಟಿದ್ದ ಸ್ವಿಫ್ಟ್ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾರ್ ವೇಗವಾಗಿ ಬಂದಿದ್ದು, ಸಕಲೇಶಪುರ ತಾಲ್ಲೂಕಿನ ಕುಂಬಾರಗಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಮೃತಪಟ್ಟವರಲ್ಲಿ ಯುವತಿ ಹಾಗೂ ಮೂವರು ಪುರುಷರಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕುಂಬಾರಗಟ್ಟೆ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದರಿಂದ ಈ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದರಾದರೂ, ಈ ವೇಳೆಗೆ ಅವರು ಮೃತಪಟ್ಟಿದ್ದರೆನ್ನಲಾಗಿದೆ.